
ಬಡ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಲವು ಕ್ರಮಗಳ ಕುರಿತು ಸಮಾಲೋಚನೆ
ತೀರ್ಥಹಳ್ಳಿ: ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯು ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಜೆ 4 ಗಂಟೆಗೆ ಆರಂಭವಾದ ಸಭೆ ರಾತ್ರಿ 8 ಗಂಟೆಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ನಡೆದಿದ್ದು, ಆಸ್ಪತ್ರೆಯ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು, ಆಸ್ಪತ್ರೆಯ ಭದ್ರತೆಯನ್ನು ಬಲಪಡಿಸುವುದು ಹಾಗೂ ಬಡ ಮತ್ತು ಸಾಮಾನ್ಯ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ದೊರೆಯುವಂತೆ ಮಾಡುವ ಕುರಿತು ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು.
ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲದ ದೃಷ್ಟಿಯಿಂದ ಅಕ್ರಮವಾಗಿ ಅಥವಾ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುವ ಆಂಬುಲೆನ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಆಸ್ಪತ್ರೆಯ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಹೋಂ ಗಾರ್ಡ್‌ಗಳನ್ನು ನಿಯೋಜಿಸುವ ಬಗ್ಗೆಯೂ ಸಮಾಲೋಚಿಸಲಾಯಿತು.
ಇನ್ನು ಎಕ್ಸ್‌ರೇ ಸೇವೆ, ರಕ್ತ ಪರೀಕ್ಷೆ ಹಾಗೂ ಇತರ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲಿಯೇ ಒದಗಿಸುವ ಕುರಿತು ಚರ್ಚಿಸಲಾಯಿತು. ರೋಗಿಗಳು ಪರೀಕ್ಷೆ ಹಾಗೂ ಔಷಧಿಗಳಿಗಾಗಿ ಹೊರಗಡೆ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ಸಾಧ್ಯವಾದಷ್ಟು ಹೆಚ್ಚಿನ ಸೌಲಭ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿರುವ ಹೋಟೆಲ್, ಜ್ಯೂಸ್ ಅಂಗಡಿ ಹಾಗೂ ನಂದಿನಿ ಪಾರ್ಲರ್‌ಗಳ ನಿರ್ವಹಣೆ ಮತ್ತು ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವುದು, ತುರ್ತು ಚಿಕಿತ್ಸಾ ವಿಭಾಗದ ಸುತ್ತಮುತ್ತಲಿನ ಪ್ರದೇಶವನ್ನು ಅಭಿವೃದ್ಧಿಪಡಿಸುವುದು ಹಾಗೂ ರೋಗಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ವಿಚಾರಗಳೂ ಸಭೆಯಲ್ಲಿ ಪ್ರಸ್ತಾಪವಾದವು.
ಇದಲ್ಲದೆ, ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ಗಳ ಅಭಿವೃದ್ಧಿ ಹಾಗೂ ಒಳರೋಗಿಗಳು ಮತ್ತು ಅವರ ಕುಟುಂಬಸ್ಥರಿಗೆ ಅನುಕೂಲವಾಗುವಂತೆ ಊಟದ ವ್ಯವಸ್ಥೆ ಕಲ್ಪಿಸಲು ಸೂಕ್ತ ಸ್ಥಳ ನಿಗದಿಪಡಿಸುವ ಬಗ್ಗೆಯೂ ಚರ್ಚೆ ನಡೆಸಲಾಯಿತು.
ರಕ್ತ ಪರೀಕ್ಷೆ, ಔಷಧಿ ಹಾಗೂ ಬೆಳಕಿನ ವ್ಯವಸ್ಥೆಗೆ ಮನವಿ
ಆರೋಗ್ಯ ರಕ್ಷಾ ಸಮಿತಿ ಸದಸ್ಯ ಹಾಗೂ ಜಯ ಕರ್ನಾಟಕ ಸಂಘಟನೆಯ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್ ಅವರು, ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ರಕ್ತ ಪರೀಕ್ಷೆ ಮತ್ತು ಔಷಧಿಗಳಿಗಾಗಿ ಹೊರಗಡೆ ತೆರಳಬೇಕಾದ ಪರಿಸ್ಥಿತಿ ಉಂಟಾಗದಂತೆ ಆಸ್ಪತ್ರೆಯಲ್ಲಿಯೇ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಸಾರ್ವಜನಿಕರಿಂದ ಕೇಳಿಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಆಸ್ಪತ್ರೆಯ ಶವಾಗಾರದ ಬಳಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದನ್ನು ಸಭೆಯ ಗಮನಕ್ಕೆ ತಂದ ಅವರು, ಆಸ್ಪತ್ರೆಯ ನಾಲ್ಕೂ ದಿಕ್ಕುಗಳಲ್ಲಿ ಆಧುನಿಕ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ಗುತ್ತಿಗೆ ನೌಕರರ ವೇತನ ಸಮಸ್ಯೆ ಚರ್ಚೆ
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಯಾಗದಿರುವ ಸಮಸ್ಯೆಯೂ ಸಭೆಯಲ್ಲಿ ಚರ್ಚೆಗೆ ಬಂದಿತು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶ್ರೇಯಸ್ ರಾವ್, ವಾಸುದೇವ್ ಕಾಮತ್ ಸೇರಿದಂತೆ ಸಮಿತಿ ಸದಸ್ಯರು ಈ ಸಮಸ್ಯೆಯ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.
ಶಾಸಕ ಆರಗ ಜ್ಞಾನೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಮಿತಿ ಸದಸ್ಯರು ಸುದೀರ್ಘವಾಗಿ ಚರ್ಚಿಸಿದರು. ತೀರ್ಥಹಳ್ಳಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಬಡವರು ಮತ್ತು ಸಾಮಾನ್ಯ ಜನರಿಗೆ ತಾಲೂಕು ಆಸ್ಪತ್ರೆಯಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತಾಗಬೇಕು ಎಂಬ ಉದ್ದೇಶಕ್ಕೆ ಸಭೆಯಲ್ಲಿ ಒತ್ತು ನೀಡಲಾಯಿತು.




Leave a Reply