https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಕೆಂಚನಾಲ ಗ್ರಾಮದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಮನವಿ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ರೈಲ್ವೆ ಹಳಿ ದಾಟಲು ಅನುಕೂಲವಾಗುವಂತೆ ರೈಲ್ವೆ ಕೆಳಸೇತುವೆ (LHS/RUB) ನಿರ್ಮಿಸಿಕೊಡುವಂತೆ ಆಗ್ರಹಿಸಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೆಂಚನಾಲ ಗ್ರಾಮದ ನಿಂಗರಾಜ್, ರಾಘವೇಂದ್ರ, ಕೆ.ಸಿ. ಅರುಣಾ, ಕೋಡಗಪ್ಪ ಹಾಗೂ ರವಿಶಿದ್ಧಪ್ಪ ಅವರು ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗದಿಂದ ತಾಲ್ಲೂಕು ಕೇಂದ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಕೆಂಚನಾಲ ಗ್ರಾಮದ ಮಧ್ಯಭಾಗದಲ್ಲಿ ಹಾದುಹೋಗಿದ್ದು, ಈ ಹಿಂದೆ ಇಲ್ಲಿ ರೈಲ್ವೆ ಗೇಟ್ ವ್ಯವಸ್ಥೆ ಇತ್ತು. ಆದರೆ, ಇದೀಗ ರೈಲ್ವೆ ಗೇಟ್ ಮುಚ್ಚಿ, ರಸ್ತೆಯ ಎರಡೂ ಬದಿಗಳಲ್ಲಿ ಕಬ್ಬಿಣದ ಬೇಲಿ ಅಳವಡಿಸಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕೊಂಕಣ ರೈಲ್ವೆ ಮಾರ್ಗದಲ್ಲಿ ಕಾಮಗಾರಿಗಳು ಆರಂಭವಾಗಿದ್ದು, ರೈಲ್ವೆ ಹಳಿಗಳಲ್ಲಿ ವಿದ್ಯುತ್ ಮಾರ್ಗ ಅಳವಡಿಸಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೈಲುಗಳ ಸಂಚಾರ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಎರಡೂ ಬದಿಯ ಗ್ರಾಮಸ್ಥರು ಸಂಚಾರಕ್ಕಾಗಿ ಪರ್ಯಾಯ ಮಾರ್ಗವನ್ನು ಅವಲಂಬಿಸಬೇಕಾಗಿದೆ. ಆದರೆ, ಸಮೀಪದ ಒಡ್ಡಿನಗದ್ದೆ ಭಾಗದಲ್ಲಿರುವ ಕೆಳಸೇತುವೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಶಾಲಾ ಮಕ್ಕಳಿಗೆ ತೀವ್ರ ತೊಂದರೆ

ರೈಲ್ವೆ ಹಳಿಯ ಒಂದು ಬದಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮತ್ತೊಂದು ಬದಿಯಲ್ಲಿ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಮತ್ತು ಮನೆಗೆ ಮರಳಲು ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಣದ ಹಿತದೃಷ್ಟಿಯಿಂದ ಕೆಂಚನಾಲ ಗ್ರಾಮದಲ್ಲಿಯೇ ರೈಲ್ವೆ ಕೆಳಸೇತುವೆ ನಿರ್ಮಿಸುವುದು ಅತ್ಯಗತ್ಯವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದಲ್ಲದೆ, ರೈತರು ಕೃಷಿ ಚಟುವಟಿಕೆಗಳಿಗೆ ಜಾನುವಾರುಗಳನ್ನು ಕರೆದೊಯ್ಯಲು, ಕೃಷಿ ಉತ್ಪನ್ನಗಳನ್ನು ಸಾಗಿಸಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ದೈನಂದಿನ ಕೆಲಸಗಳಿಗೆ ತೆರಳಲು ರೈಲ್ವೆ ಹಳಿ ದಾಟುವ ಸಮಸ್ಯೆ ಎದುರಾಗಿದೆ. ಗ್ರಾಮದ ಒಂದು ಬದಿಯಲ್ಲಿ ಪಶು ಆಸ್ಪತ್ರೆ, ಮತ್ತೊಂದು ಬದಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ತೆರಳುವುದಕ್ಕೂ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಾತ್ರೆ, ಅಂತ್ಯಕ್ರಿಯೆಗೂ ಅಡ್ಡಿ

ಕೆಂಚನಾಲ ಗ್ರಾಮದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವನ್ನು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ರೈಲ್ವೆ ಹಳಿಯ ಎರಡೂ ಬದಿಗಳಲ್ಲಿ ಬೇಲಿ ಅಳವಡಿಸಿರುವುದರಿಂದ ಜಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುವ ಆತಂಕವಿದೆ. ಅಲ್ಲದೆ, ಗ್ರಾಮದ ರುದ್ರಭೂಮಿಗೆ ಮೃತದೇಹಗಳನ್ನು ಸಾಗಿಸಲು ಸಹ ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

60 ಮೀಟರ್ ವ್ಯಾಪ್ತಿಯಲ್ಲಿ ಕೆಳಸೇತುವೆ ನಿರ್ಮಿಸಲು ಆಗ್ರಹ

ಕೆಂಚನಾಲ ಗ್ರಾಮದಲ್ಲಿ ರೈಲ್ವೆ ಹಳಿಯಿಂದ ಸುಮಾರು 60 ಮೀಟರ್ ವ್ಯಾಪ್ತಿಯಲ್ಲಿರುವ ಸ್ಥಳದಲ್ಲಿ ಕೆಳಸೇತುವೆ ನಿರ್ಮಿಸಲು ಅವಕಾಶ ಕಲ್ಪಿಸಬೇಕು. ಎಲ್‌ಎಚ್‌ಎಸ್ (LHS) ಅಥವಾ ಆರ್‌ಯುಬಿ (RUB) ಮಾದರಿಯ ರೈಲ್ವೆ ಕೆಳಸೇತುವೆ ನಿರ್ಮಿಸಿ ರಸ್ತೆ ಸಂಪರ್ಕ ಕಲ್ಪಿಸಿದರೆ ಶಾಲಾ ಮಕ್ಕಳು, ರೈತರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಮನವಿದಾರರು ತಿಳಿಸಿದ್ದಾರೆ.

ಗ್ರಾಮಸ್ಥರ ಬಹುದಿನಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿ ಕೆಂಚನಾಲ ಗ್ರಾಮದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಮನವಿ ಮೂಲಕ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *