
ರೈತ ಹೋರಾಟ, ಸಾಮಾಜಿಕ ನ್ಯಾಯ ಹಾಗೂ ಜನಪರ ಸೇವೆಯನ್ನು ಗುರುತಿಸಿರುವುದು ಹೆಮ್ಮೆಯ ಸಂಗತಿ ಎಂದ ಮಂಜುನಾಥ್ ಗೌಡ
ಶಿವಮೊಗ್ಗ: ಹಿರಿಯ ಸಮಾಜವಾದಿ ಚಿಂತಕರು, ಮಾಜಿ ಸಚಿವರು ಹಾಗೂ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕಾಗೋಡು ತಿಮ್ಮಪ್ಪ ಅವರಿಗೆ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ್ ಗೌಡ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
ದಶಕಗಳ ಕಾಲ ರಾಜ್ಯದ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಅತ್ಯಂತ ಸಂತಸದ ಮತ್ತು ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷವಾಗಿ ಐತಿಹಾಸಿಕ ಕಾಗೋಡು ರೈತ ಹೋರಾಟದ ಮೂಲಕ ರೈತರ ಹಕ್ಕುಗಳು, ಭೂಮಿಯ ಮೇಲಿನ ಹಕ್ಕು ಹಾಗೂ ಸಾಮಾಜಿಕ ಸಮಾನತೆಗಾಗಿ ಧ್ವನಿ ಎತ್ತಿದ ಕಾಗೋಡು ತಿಮ್ಮಪ್ಪ ಅವರ ಹೋರಾಟದ ಬದುಕು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿದೆ. ರೈತಪರ ಚಿಂತನೆ, ಶೋಷಿತ ವರ್ಗಗಳ ಪರವಾದ ನಿಲುವು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಅವರು ನಡೆಸಿದ ನಿರಂತರ ಹೋರಾಟಗಳು ರಾಜ್ಯದ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿವೆ.
ಸಾರ್ವಜನಿಕ ಜೀವನದಲ್ಲಿ ಅಧಿಕಾರದ ಸ್ಥಾನಗಳನ್ನು ಅಲಂಕರಿಸಿದ್ದರೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವನ್ನು ಹೊಂದಿದ್ದ ಅವರು, ತಮ್ಮ ರಾಜಕೀಯ ಅನುಭವ ಹಾಗೂ ಸಾಮಾಜಿಕ ಬದ್ಧತೆಯ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಹಿರಿಯ ರಾಜಕೀಯ ಮುತ್ಸದ್ದಿಯ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿರುವುದು ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಡಾ. ಆರ್.ಎಂ. ಮಂಜುನಾಥ್ ಗೌಡ ಅಭಿಪ್ರಾಯಪಟ್ಟಿದ್ದಾರೆ.
ಕಾಗೋಡು ತಿಮ್ಮಪ್ಪ ಅವರ ಹೋರಾಟದ ಬದುಕು, ಜನಪರ ಕಾಳಜಿ ಮತ್ತು ಸಮಾಜಮುಖಿ ಸೇವೆ ಮುಂದಿನ ಪೀಳಿಗೆಯ ಯುವಜನರಿಗೆ ದಾರಿದೀಪವಾಗಲಿ. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ದೊರೆಯಲಿ ಎಂದು ಅವರು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಆರ್. ಜಯಂತ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ.ಎಲ್. ಸುಂದರೇಶ್, ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಕರಕುಚ್ಚಿ ಲೋಕೇಶ್ ಹಾಗೂ ತೀರ್ಥಹಳ್ಳಿ ಆರ್ಯ ಈಡಿಗರ ಸಂಘದ ನಿರ್ದೇಶಕರಾದ ಕುರುವಳ್ಳಿ ನಾಗರಾಜ್ ಉಪಸ್ಥಿತರಿದ್ದರು.




Leave a Reply